ಬೆಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 19 ವರ್ಷದ ದರ್ಶನ್ ಎಂಬಾತನನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಆರೋಪಿ ವಿದ್ಯಾರ್ಥಿ ಮಾರ್ಚ್ 15ರಿಂದ 31ರವರೆಗೆ ಬಿ.ಕಾಂ ಪದವಿಯ 3ನೇ ಸೆಮಿಸ್ಟರ್ ಪರೀಕ್ಷೆ ಬರೆಯಬೇಕಿದ್ದು, ಪರೀಕ್ಷೆ ಬರೆಯಲು ಜಾಮೀನು ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ.
ಈ ವೇಳೆ ಸರ್ಕಾರಿ ಅಭಿಯೋಜಕರು ಪ್ರಕರಣ ತನಿಖಾ ಹಂತದಲ್ಲಿದ್ದಾಗ ಆರೋಪಿಗೆ ಜಾಮೀನು ನೀಡಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ಆಕ್ಷೇಪಿಸಿದ್ದಾರೆ. ಆದರೆ, ಆರೋಪಿಯ ಭವಿಷ್ಯ ಪರಿಗಣಿಸಿ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.










