ನವದೆಹಲಿ : ಅತ್ಯಾಚಾರ, ಕೊಲೆ ಬೆದರಿಕೆ ಹಿನ್ನಲೆ ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರಿಗೆ ದೆಹಲಿ ಪೊಲೀಸರು ಭದ್ರತೆ ನೀಡಿದ್ದಾರೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬಸ್ಥರಿಗೂ ಒಳಗೊಂಡಂತೆ ಭದ್ರತೆ ನೀಡಿದ್ದಾರೆ. ಕಳೆದ ತಿಂಗಳು ಖಾಸಗಿ ವಾಹಿನಿಯ ಚರ್ಚೆಯಲ್ಲಿ ಭಾಗಿಯಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರಿಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ.
ಬೆದರಿಕೆ ಕರೆ ಬಂದ ಬೆನ್ನಲ್ಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದ ನೂಪುರ್ ಶರ್ಮಾ, ತಮಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 507 (ಅನಾಮಧೇಯ ಸಂವಹನದಿಂದ ಅಪರಾಧ ಬೆದರಿಕೆ) ಮತ್ತು 509 (ಮಹಿಳೆಯರ ನಮ್ರತೆಗೆ ಅವಮಾನ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.










