ಬೆಂಗಳೂರು: ಅಪರಿಚಿತ ಮಹಿಳೆಯೊಂದಿಗಿರುವ ಅಶ್ಲೀಲ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತನ್ನನ್ನು ಮೂಲೆಗುಂಪು ಮಾಡುವ ಪಿತೂರಿಯ ಭಾಗವಾಗಿ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಮಠಂದೂರು ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೋಟೋಗಳನ್ನು ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆಕ್ಟ್ ಪ್ರಕಾರ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
2018ರಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಜೀವ್ ಮಠಂದೂರು ಅವರು ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ಅವರನ್ನು 19,477 ಮತಗಳ ಅಂತರದಿಂದ ಸೋಲಿಸಿದ್ದರು. ಇದೀಗ ಸಂಜೀವ ಮಠಂದೂರು ಮತ್ತೊಮ್ಮೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಈ ಬಾರಿ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಬೆಂಬಲಿಗ ಅಶೋಕ್ ರೈ ಕೂಡ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಪುತ್ತೂರು ಬಿಜೆಪಿ ಟಿಕೆಟ್ಗಾಗಿ ಭರ್ಜರಿ ಫೈಟ್ ನಡೆದಿದೆ. ಇದರ ಮಧ್ಯೆ ಹಾಲಿ ಶಾಸಕ ಸಂಜೀವ ಮಠಂದೂರು ಅವರ ಫೋಟೋ ವೈರಲ್ ಆಗಿದೆ.










