ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ…

83
firstsuddi

ಕಲಬುರಗಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯ ಆದೇಶಿಸಿದೆ.

ಜೂನ್ 26, 2019 ರಂದು ಜಿಲ್ಲೆಯ ಅಪಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಕರಜಗಿ ಗ್ರಾಮದ ಅಪ್ರಾಪ್ತ ಬಾಲಕಿ ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಆರೋಪಿ ಅಂಬರೀಶ್ ಹೊನ್ನಳ್ಳಿ ಎಂಬ ಯುವಕ ಅಪಹರಿಸಿ ಬಂಧನದಲ್ಲಿಟ್ಟು ನಾಲ್ಕು ದಿನಗಳ ಕಾಲ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ.

ಘಟನೆ ಬಗ್ಗೆ ಬಾಲಕಿಯ ತಂದೆ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಅಫಜಲಪುರ ಠಾಣೆಯ ಸರ್ಕಲ್ ಇನ್ಸಪೆಕ್ಟರ್ ಮಹಾಂತೇಶ್ ಪಾಟೀಲ್, ತನಿಖೆ ನಡೆಸಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 366( ಎ)506, 376(2)(ಐ)(ಎನ್) 342, ಪೋಕ್ಸೋ ಕಾಯ್ದೆಯಡಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಾದ ಪ್ರತಿವಾದ ಆಲಿಸಿದ 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಧೀಶರು ವಿವಿಧ ಐಪಿಸಿ ಸೆಕ್ಷನ್ ಅಡಿ ಆರೋಪಿಗೆ 20ವರ್ಷ ಕಠಿಣ ಶಿಕ್ಷೆ ಹಾಗೂ 95 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.