ಮಂಡ್ಯ : ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರುವ ಕೆರೆ ಕಾಮೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಯ ಹಂತದಲ್ಲೇ ಕಾಮೇಗೌಡ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಇದೀಗ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಕಳೆದ ನಾಲ್ಕು ದಶಕಗಳಿಂದ ಕೆರೆ, ಕಾಲುವೆಗಳನ್ನು ನಿರ್ಮಿಸಿ ಸುತ್ತಲಿನ ಗ್ರಾಮಸ್ಥರಿಗೆ, ದನ ಕರುಗಳಿಗೆ ನೀರಿನ ಆಸರೆ ಒದಗಿಸಿದ್ದ ಕಾಮೇಗೌಡರ ಸಾಧನೆಯನ್ನು ಸ್ಮರಿಸಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದರು.










