ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಮಂಡನೆಗೂ ಮುನ್ನ ರಾಯರ ಮಠಕ್ಕೆ ಭೇಟಿ ನೀಡಿ ಬಜೆಟ್ ಪ್ರತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಈ ಬಾರಿ ರೈತಪರ ಬಜೆಟ್ ಮಂಡಿಸಲು ಪ್ರಯತ್ನಿಸಿದ್ದೇನೆ. ರೈತರಿಗೆ ನೀಡಲಾಗಿರುವ ಯಾವುದೇ ಯೋಜನೆಗಳನ್ನು ಕಡಿತಗೊಳಿಸುವುದಿಲ್ಲ. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆಯಾಗಿ ರೈತರು ಹಾಗೂ ಜನ ಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಈ ವೇಳೆ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಸಚಿವ ಪ್ರಭು ಚವ್ಹಾಣ್ ಹಾಗೂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಸೇರಿದಂತೆ ಮತ್ತಿತರರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.










