ಉಕ್ರೇನ್​​ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಡೀಮ್ಡ್ ವಿವಿಗಳಲ್ಲಿ ಪ್ರವೇಶ : ಡಾ. ಪ್ರಭಾಕರ್​ ಕೋರೆ.

63
firstsuddi

ಬೆಳಗಾವಿ : ಯದ್ಧಪೀಡಿತ ಉಕ್ರೇನ್​​ನಿಂದ ಮರಳಿದ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಸರ್ಕಾರದ ಸೂಚನೆ ಹಾಗೂ ನಿಯಮಗಳ ಅನುಸಾರ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಉಕ್ರೇನ್​​ನಿಂದ ಭಾರತೀಯ ವೈದ್ಯ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧದಿಂದ ಸಾವಿರಾರು ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ಉಕ್ರೇನ್ ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದುಬರುವಂತಹ ಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ಉಕ್ರೇನ್ ನಲ್ಲಿ ಕಲಿಯುತ್ತಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಪ್ರವೇಶವನ್ನು ನೀಡಲಾಗುವುದು ಎಂದು ಡಾ.ಪ್ರಭಾಕರ್ ಕೋರೆ ಅವರು ತಿಳಿಸಿದ್ದಾರೆ.