ಉಚಿತ ಟ್ಯಾಬ್ ವಿತರಣೆ ಯೋಜನೆ ಜಿಲ್ಲೆಗೂ ವಿಸ್ತರಿಸುವಂತೆ ಒತ್ತಾಯ…

93
firstsuddi

ಚಿಕ್ಕಮಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕರ ಕಲ್ಯಾಣ ಮಂಡಳಿ ರೂಪಿಸಿರುವ ಉಚಿತ ಟ್ಯಾಬ್ ವಿತರಿಸುವ ಯೋಜನೆಯನ್ನು ಚಿಕ್ಕಮಗಳೂರು ಜಿಲ್ಲೆಗೂ ವಿಸ್ತರಿಸಬೇಕು ಎಂದು ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷ ಜಯರಾಂ ಸಜಿತ್ ಒತ್ತಾಯಿಸಿದರು.

ತಾಲ್ಲೂಕಿನ ಕುಳ್ಳಾರ ಹಳ್ಳಿಯಲ್ಲಿ ಕಾರ್ಮಿಕ ಇಲಾಖೆಯ ಶ್ರಮ ಸಂಜೀವಿನಿ ಯೋಜನೆಯಡಿಯಲ್ಲಿ ಇಂದು ಏರ್ಪಡಿಸಿದ್ದ ಕಟ್ಟಡ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಟ್ಟಡ ಕಾರ್ಮಿಕ ಮಕ್ಕಳಿಗೆ ಉಚಿತ ಟ್ಯಾಬ್ ವಿತರಣೆ ಮಾಡುವ ಸಂಬಂಧ ಕಾರ್ಮಿಕರ ಕಲ್ಯಾಣ ಮಂಡಳಿ ಈಗಾಗಲೇ ಹಾಸನ ಜಿಲ್ಲೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ ಎಂದರು.

ಈ ಯೋಜನೆಯನ್ನು ಚಿಕ್ಕಮಗಳೂರು ಜಿಲ್ಲೆಗೂ ವಿಸ್ತರಿಸಿದರೆ ಇಲ್ಲಿನ ಬಡ ಕಟ್ಟಡ ಕಾರ್ಮಿಕರ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದ ಅವರು ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದವರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಇಲಾಖೆಯ ಶ್ರಮ ಸಂಜೀವಿನಿ ವೈದ್ಯ ಡಾ|| ಅನಿತ್ ಕುಮಾರ್ ನೇತೃತ್ವದ ತಂಡ ಬೆಳಗಿನಿಂದ ಸಂಜೆಯವರೆಗೆ 80 ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿತು.

ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಸದಸ್ಯರಾದ ನಿಂಗೇಗೌಡ, ಈಶ್ವರೇಗೌಡ, ಸೋಮೇಗೌಡ, ಸಂಘಟನಾ ಕಾರ್ಯದರ್ಶಿ ಲತಾ, ಮರಿಗೌಡ ಹಾಜರಿದ್ದರು.