ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‍ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ. ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಮಿರ್ಜಾಪುರದ ಕಚ್ವಾನ್ ಪ್ರದೇಶದ ಕಟ್ಕಾ ಗ್ರಾಮದ ಬಳಿ ವಾರಾಣಸಿ – ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಿರ್ಜಾಪುರ) ಅಭಿನಂದನ್ ತಿಳಿಸಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಜನರ ಗುಂಪು ಜಮಾಯಿಸಿತ್ತು. ಮಾಹಿತಿ ಪಡೆದು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.