ನವದೆಹಲಿ : ಉನ್ನಾವೋ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ದೇಶಾಧ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗಾ ಸಂತ್ರಸ್ಥೆಗೆ ನ್ಯಾಯ ಕೊಡಿಸಿ ಎಂದು ಪ್ರತಿಭಟನೆ ನಡೆಸುತ್ತಿದ್ದ ತಾಯಿಯೊಬ್ಬರು ತನ್ನ ಅಪ್ರಾಪ್ತ ಮಗಳ ಮೇಲೆ ಪೆಟ್ರೋಲ್ ಸುರಿದಿರುವ ಘಟನೆ ಸಫ್ಜರ್ ಜಂಗ್ ಆಸ್ಪತ್ರೆ ಎದುರು ನಡೆದಿದೆ. ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ಡಿ.5ರಂದು ಸಂತ್ರಸ್ಥೆ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ತೆರಳುತ್ತಿದ್ದ ವೇಳೆ ಸಂತ್ರಸ್ಥೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಶೇ.90ರಷ್ಟು ಸುಟ್ಟು ಹೋಗಿದ್ದ ಸಂತ್ರಸ್ತೆ ನಿನ್ನೆ ರಾತ್ರಿ 11:40 ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದನ್ನು ವಿರೋಧಿಸಿ ಇಂದು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸಿ ಎಂದು ಮಹಿಳೆಯೊಬ್ಬರು ತನ್ನ 6ವರ್ಷದ ಮಗಳ ಮೇಲೆ ಪೆಟ್ರೋಲ್ ಸುರಿದಿದ್ದು, ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.










