ತುಮಕೂರು : ನಿನ್ನೆ ನಡೆದ ಎನ್ಎಸ್ಯುಐ ದಾಳಿ ಹಿನ್ನೆಲೆ ತಿಪಟೂರಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಐಜಿಪಿ ಚಂದ್ರಶೇಖರ್ ಹಾಗೂ ತುಮಕೂರು ಎಸ್ ಪಿ ರಾಹುಲ್ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈಗಾಗಲೇ ಸಚಿವ ಬಿ ಸಿ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಎನ್ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತಷ್ಟು ಜನರನ್ನ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಡೀ ಪ್ರಕರಣವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಸಚಿವರ ಮನೆ ಆವರಣದಲ್ಲಿ ಎನ್ ಎಸ್ ಯುಐ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.










