ತುಮಕೂರು: ಎರಡು ಬಸ್ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಮಹಿಳೆಯರು ಬಸ್ ಹತ್ತಲು ಮುಂದಾದಾಗ ಗೌರಿಬಿದನೂರು ಹಾಗೂ ಕೊರಟಗೆರೆಯ ಬಸ್ಗಳ ನಡುವೆ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










