ಬೆಂಗಳೂರು: ಎರಡು ಸ್ಕೂಟರ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನಗರದ ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ನಡೆದಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










