ಮುಂಬೈ : ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.
ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಅವರು ಇಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾನು ಸರ್ಕಾರದಲ್ಲಿ ಇರಲ್ಲ ಎಂದು ತಿಳಿಸಿದ್ದಾರೆ.
ಇಂದು ಸಂಜೆ 7:30ಕ್ಕೆ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಇದೀಗ ಏಕನಾಥ್ ಶಿಂಧೆ ಅವರನ್ನ ಮುಖ್ಯಮಂತ್ರಿ ಎಂದು ಘೋಷಿಸಿ ಬಿಜೆಪಿ ಅಚ್ಚರಿ ಮೂಡಿಸಿದೆ.










