ಬೆಂಗಳೂರು: ಮುಂದಿನ ವರ್ಷ ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಸೇರ್ಪಡೆಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ವಿಧಾನಸೌಧದ ಮುಂಭಾಗದಲ್ಲಿ ಬಿಎಂಟಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿಯಲ್ಲಿ ಪ್ರಯಾಣ ಮಾಡ್ತಾರೆ. ಇದರಲ್ಲಿ ಎಲ್ಲ ಜಾತಿ, ಧರ್ಮ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.
ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದರು.
ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದು ಕಿಡಿಕಾರಿದರು.










