ಕಟ್ಟಡ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು…

60
firstsuddi

ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಎಂದು ಗುರುತಿಸಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದು ಬಿದ್ದಿದೆ. ಈ ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಎಂಬುವವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಬದುಕುಳಿದಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ವೇಳೆ ಸುಮಾರು 9 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದರು.

ಸ್ಥಳಕ್ಕೆ ಎಸ್​ಪಿ ಕೆ.ರಾಮರಾಜನ್ ಮತ್ತು ಶಾಸಕ ಡಾ.ಮಂತರ್​ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.