ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯು ಕರಾಳ ದಿನಾಚರಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಂಇಎಸ್ ಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಮಹಾರಾಷ್ಟ್ರ ಮೂಲದ ಮರಾಠಿ ಪರ ಸಂಘಟನೆಯಾದ ಎಂಇಎಸ್ ಎರಡು ದಶಕಗಳಿಂದ ಬೆಳಗಾವಿಯಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸದಂದು ಕರಾಳ ದಿನಾಚರಣೆ ಮಾಡುತ್ತಿದೆ. ಸರ್ಕಾರ ಕರಾಳ ದಿನಾಚರಣೆಗೆ ಅವಕಾಶ ನೀಡದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್ ಪ್ರದರ್ಶಿಸುತ್ತಾ ಬಂದಿದೆ. ಇಂತಹವರ ವಿರುದ್ಧ ಪೊಲೀಸರು ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಸರ್ಕಾರದ ಎಚ್ಚರಿಕೆಗೆ ಎಂಇಎಸ್ ಕಾರ್ಯಕರ್ತರು ಸ್ವಲ್ಪವೂ ತಲೆಕೆಡಿಸಿಕೊಳ್ಳುತ್ತಿಲ್ಲ. ಕಳೆದ 3-4 ವರ್ಷಗಳಿಂದ ಕೆಟ್ಟ ವರ್ತನೆ ತೋರುತ್ತಿದ್ದಾರೆ. ಮಾರಕಾಸ್ತ್ರಗಳನ್ನು ಪ್ರತಿಭಟನೆಗೆ ಕೊಂಡೊಯ್ಯಲಾಗುತ್ತಿದೆ. ಎಂಇಎಸ್ ಅಧ್ಯಕ್ಷರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವದ ಬಳಿಕ ಮಾಧ್ಯಮಗಳ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅರ್ಜಿಯನ್ನು ಬಾಕಿ ಉಳಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಕೋರಿದರು.










