ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್…

66
firstsuddi

ಕೋಲಾರ: ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ, ಕಾಲಿಗೆ ವೇಮಗಲ್ ಠಾಣೆ ಇನ್ಸ್​ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಫೈರಿಂಗ್ ಮಾಡಲಾಗಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್​ಗೂ ಗಾಯವಾಗಿದೆ.

ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್​ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಆರು ಆರೋಪಿಗಳ ಪೈಕಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಮೂರು ಜನರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಎಂಬವರನ್ನು ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಎಂ ಶ್ರೀನಿವಾಸ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.