ಕಾಂಗ್ರೆಸ್ ಹಿರಿಯ ನಾಯಕ ವಾಸು ನಿಧನ…

37
firstsuddi

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ.

ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು. ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2013ರಿಂದ 2018ರವರೆಗೆ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳ ಮೂಲಕ ಗಮನ ಸೆಳೆದಿದ್ದರು.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್, ಶಾಸಕ ಜಿ.ಟಿ.ದೇವೆಗೌಡ ಹಾಗೂ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.