ಬೆಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದಾರ್ಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕೀಡಾಗಿದ್ದೇನೆ. ತಮ್ಮ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ ಅವರ ಅಗಲಿಕೆಯಿಂದ ಎಸ್.ಎಂ.ಕೃಷ್ಣ ಮತ್ತು ಕುಟುಂಬ ವರ್ಗ ಅನುಭವಿಸುತ್ತಿರುವ ನೋವು-ಸಂಕಟಗಳನ್ನು ನಾನು ಅರ್ಥಮಾಡಿಕೊಳಬಲ್ಲೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.










