ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ…

77
firstsuddi

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ರಾಜೀನಾಮೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಇದೀಗ ಅವರ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದರು. ಅದರಂತೆ ವಿರೂಪಾಕ್ಷಪ್ಪ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಮತ್ತು ನನ್ನ ಕುಟುಂಬದ ಮೇಲೆ ಷಡ್ಯಂತ್ರ ನಡೆಸಲಾಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ತಂದೆ ಮಾಡಾಳ್ ವಿರೂಪಾಕ್ಷಪ್ಪ ಪರವಾಗಿ ಪ್ರಶಾಂತ್ ಹಣ ಸ್ವೀಕರಿಸುತ್ತಿದ್ದಾರೆ ಎಂದು ದೂರುದಾರ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಮಾಡಾಳ್ ಅವರನ್ನು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.