ಕೆರೆಗಳ ನಿರ್ಮಾತೃ, ಆಧುನಿಕ ಭಗೀರಥ ಕಾಮೇಗೌಡ ವಿಧಿವಶ…

81
firstsuddi

ಮಂಡ್ಯ : ಕೆರೆಗಳ ನಿರ್ಮಾತೃ, ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (86) ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವೆಂಕಟಗೌಡ ಮತ್ತು ರಾಜಮ್ಮ ದಂಪತಿಯ ಪುತ್ರ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.

ಕಾಮೇಗೌಡರ ಕಾಯಕ ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.