ಕೆ.ಎಸ್.ಆರ್.ಟಿ.ಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸೂಕ್ತ ವೇತನ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಾಜಿ ಸಿಎಂ ಹೆಚ್‍ಡಿಕೆ..

249
firstsuddi

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಅಧೀನ ಸಂಸ್ಥೆಗಳಾದ ವಾಯುವ್ಯ ಕನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಸಾವಿರಾರು ನೌಕರರು ಸರ್ಕಾರಿ ನೌಕರಿಯ ಮಾನ್ಯತೆ ಇಲ್ಲದೆ, ಸೂಕ್ತ ವೇತನ ಸವಲತ್ತುಗಳಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾರಿಗೆ ಸಂಸ್ಥೆಗಳಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕವಾಗಿ ದುಡಿಯುತ್ತಿರುವ ನೌಕರುಗಳ ಶ್ರಮಕ್ಕೂ ಅವರಿಗೆ ನೀಡುತ್ತಿರುವ ವೇತನ ಸವಲತ್ತುಗಳಿಗೂ ಅಜಗಜಾಂತರ ವ್ಯತ್ಯಾಸಗಳಿದ್ದು, ಈ ನೌಕರರುಗಳ ಕುಟುಂಬಗಳು ಕಷ್ಟದಲ್ಲೇ ಬದುಕುತ್ತಿವೆ. ನಮ್ಮ ಸರ್ಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಈ ನೌಕರರುಗಳನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸೂಕ್ತ ವೇತನ ನಿಗಧಿ ಮಾಡುವ ಕುರಿತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿತ್ತು. ಅಲ್ಲದೇ ನಾನು ರೈತರ ಸಾಲಮನ್ನಾ, ಪೊಲೀಸರ ವೇತನ ಹೆಚ್ಚಿಸುವ ಔರಾದ್ಕರ್ ವರದಿ ಜಾರಿಯಂತಹ ಕೆಲಸಗಳನ್ನು ಮಾಡಿದ್ದೆ. ಸಾರಿಗೆ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರನ್ನಾಗಿ ಮಾಡಲು ಸಿದ್ಧತೆಯನ್ನು ಮಾಡಿಕೊಂಡಿದ್ದೆ ಅಷ್ಟರಲ್ಲಿ ಮೈತ್ರಿ ಸರ್ಕಾರ ಪತನಗೊಂಡಿತ್ತು. ಹೀಗಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಅವರಿಗೆ ಸೂಕ್ತ ವೇತನ ಹಾಗೂ ಸವಲತ್ತುಗಳನ್ನು ಘೋಷಿಸಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.