ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ.. ತನಿಖಾ ವರದಿ ಬಂದ ನಂತರ ಕ್ರಮ : ಬೊಮ್ಮಾಯಿ.

39
firstsuddi

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಂದ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಈಶ್ವರಪ್ಪ ವಿರುದ್ಧ ಆರೋಪ ಮಾಡಿರುವ ಸಂತೋಷ್ ಎಂಬುವರು ಉಡುಪಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.

ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋರ್ಟ್ ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್ ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.

ಪ್ರತಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಸರ್ಕಾರದ ಅವಧಿಯಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ರಾ? ಎಂದು ಪ್ರಶ್ನಿಸಿದರು.