ಚಿಕ್ಕಮಗಳೂರು : ಕಡೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಗ್ರಾ.ಪಂ. ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಜಿಲ್ಲಾ ಪೋಲೀಸ್ ಮುಖ್ಯಾಧಿಕಾರಿ ಉಮಾ ಪ್ರಶಾಂತ್ ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರನ್ನು ಇಂದು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಕಡೂರು ತಾಲ್ಲೂಕು ನಾಗೇನಹಳ್ಳಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪದ್ಮಣ್ಣ ಗಾವಡೆ ಅವರ ಮೇಲೆ ಗ್ರಾ.ಪಂ. ಸದಸ್ಯ ವಸಂತಕುಮಾರ್ ಅವರು ಕಾಮಗಾರಿ ಸಂಬಂಧ ಅವಾಚ್ಯವಾಗಿ ನಿಂದಿಸಿ ಕೆನ್ನೆ, ಎದೆ ಮತ್ತು ಹೊಟ್ಟೆಗೆ ಥಳಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.
ಹಲ್ಲೆಯಿಂದಾಗಿ ಪಿಡಿಒ ಪದ್ಮಣ್ಣ ಗಾವಡೆ ಅವರಿಗೆ ರಕ್ತಸ್ರಾವವಾಗಿ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಈ ಸಂಬಂಧ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದಿಂದಾಗಿ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ನಿರ್ವಹಿಸಲು ಆಗದಂತಹ ವಾತಾವರಣ ನಿರ್ಮಾಣವಾಗಿದೆ ಎಂದ ಪದಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಪದಾಧಿಕಾರಿಗಳಾದ ಪೂರ್ಣೇಶ್, ಪದ್ಮರಾಜ್, ಸುಧೀರ್, ವಾಸು ಹಾಜರಿದ್ದರು.










