ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಕಣ ರಂಗೇರಿದೆ. ನಿನ್ನೆ ಅಷ್ಟೇ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ತಮ್ಮ ಗಂಡನ ಪರವಾಗಿ ಮತಯಾಚನೆ ಮಾಡಿದ್ದರು. ಅದೇ ಬೆನ್ನಿನಲ್ಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಧುಮುಕುತ್ತಿದ್ದು, ಎನ್’ಡಿಎ ಅಭ್ಯರ್ಥಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಕ್ಷೇತ್ರದಲ್ಲಿ ಇಂದು ಪ್ರಚಾರ ನಡೆಸಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರ ನಡೆಸಲಿದ್ದಾರೆ. ಮೊದಲಿಗೆ ವಿರುಪಾಕ್ಷಿಪುರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಈ ವೇಳೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎನ್’ಡಿಎ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಬಳಿಕ ಕೊಡಂಬಹಳ್ಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯ ಬಳಿಕ ಜೆ.ಬ್ಯಾಡರಹಳ್ಳಿಯಲ್ಲಿ ಪ್ರಚಾರ ನಡೆಸಲಿದ್ದು, ನಂತರ ವೈ.ಟಿ.ಹಳ್ಳಿಯಲ್ಲಿ ಪ್ರಚಾರ ಕೈಗೊಂಡು ನಿಖಿಲ್ ಪರ ಮತಯಾಚಿಸಲಿದ್ದಾರೆಂದು ತಿಳಿದುಬಂದಿದೆ.
ದೇವೇಗೌಡ ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರೊಂದಿಗೆ ಎನ್‍ಡಿಎ ಅಭ್ಯರ್ಥಿಯ ಪರವಾಗಿ ಪ್ರಚಾರಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಲೋಕಸಭಾ ಚುನಾವಣೆ ವೇಳೆ ಪಕ್ಷದ ಅಳಿವು ಉಳಿವಿಗಾಗಿ ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಕಳೆದ ಚುನಾವಣೆಯಲ್ಲಿ ನಿಖಿಲ್ ಕಣಕ್ಕಿಳಿದಾಗ ದೇವೇಗೌಡ ಅವರು ಪ್ರಚಾರ ನಡೆಸಿದ್ದರು. ಆದರೂ ಸೋಲನ್ನು ಅನುಭವಿಸಿದ್ದರು. ಇದಾಗ ಬಳಿಕ ದೇವೇಗೌಡರ ವರ್ಚಸ್ಸು ಕಡಿಮೆಯಾಗಿದೆ ಎಂದೆನಿಸುತ್ತಿದೆ ಎಂದು ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಎಂಎಲ್‍ಸಿ ಅಡಗೂರು ವಿಶ್ವನಾಥ್ ಅವರು ಮಾತನಾಡಿ, ದೇವೇಗೌಡರ ಪ್ರಚಾರ ನಿಖಿಲ್ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.