ದಾವಣಗೆರೆ : ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಇಬ್ಬರು ಪೌರಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಸತ್ಯಪ್ಪ (45) ಹಾಗೂ ಮೈಲಪ್ಪ (42) ಸಾವನ್ನಪ್ಪಿದ ಪೌರಕಾರ್ಮಿಕರು.
ಯುಗಾದಿ ಹಬ್ಬದ ಹಿನ್ನೆಲೆ ಚರಂಡಿ ಸ್ವಚ್ಛಗೊಳಿಸಲು ಬಸವನಕೋಟೆ ಗ್ರಾಪಂ ಪಿಡಿಓ ಶಶಿಧರ ಪಾಟೀಲ್ ಆದೇಶ ಹೊರಡಿಸಿದ್ದರು. ಪಿಡಿಓ ಅದೇಶದ ಹಿನ್ನೆಲೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಸತ್ಯಪ್ಪ ಮತ್ತು ಮೈಲಪ್ಪ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದರು. ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರೂ ಅಸ್ವಸ್ಥರಾಗಿದ್ದರು.
ತೀವ್ರ ಅಸ್ವಸ್ಥಗೊಂಡ ಕಾರ್ಮಿಕರನ್ನು ಹತ್ತಿರದ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾದ ಹಿನ್ನೆಲೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಇದೀಗ ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು ಪೌರಕಾರ್ಮಿಕರು ಸಾವನ್ನಪ್ಪಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೀಳಚೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










