ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರನ್ನು ವಜಾಗೊಳಿಸುವಂತೆ ಬಿಎಸ್ ಪಿ ಜಿಲ್ಲಾ ಘಟಕ ಒತ್ತಾಯ…

163
firstsuddi

ಚಿಕ್ಕಮಗಳೂರು : ಚಾಮರಾಜನಗರದಲ್ಲಿ ಆಮ್ಲಜನಕದ ಕೊರತೆಯಿಂದ ಕೊರೊನಾ ಸೋಂಕಿತರು ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಮತ್ತು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬಿಎಸ್ಪಿ ಜಿಲ್ಲಾ ಘಟಕ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಛೇರಿಯ ಶಿರಸ್ತೇದಾರ್ ಮನು ಅವರನ್ನು ಇಂದು ಭೇಟಿ ಮಾಡಿದ ಪಕ್ಷದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರ ವೈಫಲ್ಯವನ್ನು ಖಂಡಿಸಿದರು.

ಚಾಮರಾಜನಗರದ ಪ್ರಕರಣಕ್ಕೆ ಆರೋಗ್ಯ ಸಚಿವರು ಮತ್ತು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯವೇ ಕಾರಣವಾಗಿದ್ದು ಹಾಗಾಗಿ ಘಟನೆಗೆ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಸಚಿವರು ಮತ್ತು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಮುತುವರ್ಜಿಯಿಂದ ಮತ್ತು ಕಾಳಜಿಯಿಂದ ಕರ್ತವ್ಯ ನಿರ್ವಹಿಸಿದ್ದರೆ ದುರ್ಘಟನೆಯನ್ನು ತಪ್ಪಿಸಬಹುದಿತ್ತು ಎಂದ ಅವರು ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ರಾಜ್ಯ ಕಾರ್ಯದರ್ಶಿ ಪಿ.ಪರಮೇಶ್ವರ್, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ, ಕೆ.ಎಸ್.ಮಂಜುಳಾ, ಸವಿತಾ, ಕಲಾವತಿ, ಪುಷ್ಪಾ, ನವೀನ್ ಹಾಜರಿದ್ದರು.