ಚಿಕ್ಕಮಗಳೂರು : ಕಣ್ಮರೆಯಾಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಪಠ್ಯದ ಜೊತೆಗೆ ಜಾನಪದವನ್ನೂ ಕಲಿಸಬೇಕು : ಜಿ.ಎನ್.ವಿಜಯಕುಮಾರ್.

302
firstsuddi

ಚಿಕ್ಕಮಗಳೂರು : ಆಧುನಿಕತೆಯ ನಾಗಾಲೋಟದಲ್ಲಿ ಕಣ್ಮರೆಯಾಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಶಾಲೆಗಳಲ್ಲಿ ಪಠ್ಯದ ಜೊತೆಗೆ ಜಾನಪದವನ್ನೂ ಕಲಿಸಬೇಕು ಎಂದು ಜಿ.ಪಂ. ಉಪಾಧ್ಯಕ್ಷ ಜಿ.ಎನ್.ವಿಜಯಕುಮಾರ್ ಸಲಹೆ ಮಾಡಿದರು.
ತಾಲ್ಲೂಕು ಕನ್ನಡ ಜಾನಪದ ಪರಿಷತ್ ನಗರದ ಶ್ರೀ ಗುರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುಗ್ಗಿಹಬ್ಬದಲ್ಲಿ ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಜನರ ಬದುಕಿನಲ್ಲಿ ಹಾಸುಹೊಕ್ಕಾಗಿತ್ತು, ಮದುವೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲೂ ಜಾನಪದ ಮಿಳಿತವಾಗಿತ್ತು, ಆದರೆ ಆಧುನೀಕರಣ ಮತ್ತು ಜಾಗತೀಕರಣದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಅವು ಜನಮಾನಸದಿಂದ ಮರೆಯಾಗುತ್ತಿವೆ ಎಂದು ವಿಷಾದಿಸಿದರು.
ಶಿಕ್ಷಕರು ಬರೀ ಅಂಕಗಳಿಕೆಗಷ್ಟೇ ಮಕ್ಕಳನ್ನು ತಯಾರು ಮಾಡಬಾರದು, ಪಠ್ಯದ ಜೊತೆಗೆ ಅವರಲ್ಲಿ ಕಲೆ ಸಾಹಿತ್ಯ ಮತ್ತು ಸಂಸ್ಕøತಿಯನ್ನು ತುಂಬುವ ಮೂಲಕ ಅವರನ್ನು ಪರಿಪೂರ್ಣರನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಆರ್.ಪ್ರಕಾಶ್ ಜಾನಪದರು ಅಧ್ಬುತ ಜ್ಞಾನಿಗಳು ತಮ್ಮ ಜೀವನಾನುಭವವನ್ನು ಅವರು ಜಾನಪದದ ಮೂಲಕ ಧಾರೆಯೆರೆದಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಆರ್.ಜಗದೀಶ್ ನಶಿಸುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಚಂದ್ರಶೇಖರ್, ಖಜಾಂಚಿ ಸತೀಶ್ ಉಪಸ್ಥಿತರಿದ್ದರು, ಶಿಕ್ಷಕರಾದ ಎ.ಎಲ್.ಶೃತಿ ಕಾರ್ಯಕ್ರಮವನ್ನು ನಿರೂಪಿಸಿದರು, ಪೂರ್ಣೇಶ್ ಸ್ವಾಗತಿಸಿದರು, ರಂಜನಿ ವಂದಿಸಿದರು.