ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾದ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಇಂದಿನ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದರು.
ಕಪ್ಪುಪಟ್ಟಿ ಧರಿಸಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಪ್ರತಿಮೆ ಬಳಿ ಬೆಳಿಗ್ಗೆ ಕೆಲ ಕಾಲ ದರಣಿ ನಡೆಸಿದ ಪದಾಧಿಕಾರಿಗಳು ರೈತರ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಮೂಲಕ ಅನ್ನದಾತರಾದ ರೈತರ ಕತ್ತು ಹಿಸುಕುವ ಕೆಲಸ ಮಾಡಿದೆ ಎಂದು ಆರೋಪಿಸಿದರು.
ಕಳೆದ ಆರು ತಿಂಗಳಿನಿಂದ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಇಷ್ಟಾದರೂ ಸಹ ಕೇಂದ್ರ ಸರ್ಕಾರ ಕಾಯ್ದೆಯನ್ನು ಹಿಂಪಡೆಯದೆ ಹಠಮಾರಿ ಧೋರಣೆ ತಾಳಿರುವುದು ಖಂಡನೀಯ ಎಂದರು.
ದೇಶದ ಬೆನ್ನಲುಬಾದ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೂರೂ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ರಸಗೊಬ್ಬರದ ಬೆಲೆ ಹೆಚ್ಚಳವನ್ನು ಇಳಿಕೆ ಮಾಡಬೇಕು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ನಗರಕ್ಕೆ ಬಂದು ರಸಗೊಬ್ಬರ ಮತ್ತು ಕೃಷಿಗೆ ಸಂಬಂಧಿಸಿದ ಪದಾರ್ಥಗಳನ್ನು ಖರೀದಿಸಲು ಪ್ರತಿದಿನ ಕನಿಷ್ಟ 2 ಗಂಟೆ ಅವಕಾಶವನ್ನು ಜಿಲ್ಲಾಡಳಿತ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ ಕೇಂದ್ರ ಸರ್ಕಾರ ಅಂಬಾನಿ, ಅದಾನಿಯಂತಹ ಉದ್ಯಮಿಗಳು ಮತ್ತು ಶ್ರೀಮಂತರ ಪರವಾಗಿದೆ. ಬಡವರು ಮತ್ತು ರೈತರ ವಿರೋಧಿಯಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಹಠಮಾರಿ ಧೋರಣೆಯನ್ನು ಕೈಬಿಟ್ಟು ಮೂರೂ ಕೃಷಿ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ|| ಡಿ.ಎಲ್.ವಿಜಯ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮಹಮದ್ ಮಾತನಾಡಿದರು.
ಕಿಸಾನ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಬಲರಾಮ್, ಮಂಜುನಾಥ್, ನಗರಾಧ್ಯಕ್ಷ ತನೋಜ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರಾದ ರಸೂಲ್‍ಖಾನ್, ಶಾಂತ ಕುಮಾರ್, ಪವನ್, ತನ್ವೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










