ಚಿಕ್ಕಮಗಳೂರು : ವಿದ್ಯಾರ್ಥಿಗಳು ಸಾಧಿಸುವ ಛಲ, ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು : ಜೆಸಿಂತಾ ಅನಿಲ್‍ಕುಮಾರ್

408
firstsuddi

ಚಿಕ್ಕಮಗಳೂರು : ವಿದ್ಯಾರ್ಥಿಗಳು ಸಾಧಿಸುವ ಛಲ, ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‍ಕುಮಾರ್ ಸಲಹೆ ಮಾಡಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಛಲ, ಧೈರ್ಯ ಮತ್ತು ಆತ್ಮವಿಶ್ವಾಸವಿಲ್ಲದಿದ್ದರೆ ಏನನ್ನು ಸಾಧಿಸಲೂ ಸಾಧ್ಯವಾಗುವುದಿಲ್ಲ, ಆತ್ಮವಿಶ್ವಾಸವಿದ್ದರೆ ಎಲ್ಲವನ್ನೂ ಜಯಿಸಬಹುದು ಹಾಗಾಗಿ ವಿದ್ಯಾರ್ಥಿಗಳು ಅವುಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕ್ರೀಡಾಕೂಟಗಳನ್ನು ಆಯೋಜಕರು ವ್ಯವಸ್ಥಿತವಾಗಿ ನಡೆಸಬೇಕು, ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ವ್ಯವಸ್ಥಿತವಾಗಿ ನಡೆಸಿದರೆ ಮಾತ್ರ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಇಲಾಖೆ ವತಿಯಿಂದ ನ.7 ರಿಂದ 9 ರವರೆಗೆ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಅದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಕ್ರೀಡಾಜ್ಯೋತಿ ಸ್ವೀಕರಿಸಿದರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವೇಶ್ವರಪ್ಪ, ತಾಲ್ಲೂಕು ಕ್ರೀಡಾಧಿಕಾರಿ ಹೆಚ್.ಈ.ರವಿಕುಮಾರ್, ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರೇಗೌಡ, ಸಹಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎನ್.ಸುಂದರೇಶ್, ರಾಜ್ಯ ಉಪಾಧ್ಯಕ್ಷ ಪುಟ್ಟಪ್ಪ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎ.ಈ.ಅಶೋಕ್, ತಾಲ್ಲೂಕು ಅಧ್ಯಕ್ಷ ಪರಮೇಶ್, ಕಾಳಯ್ಯ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಚಾರ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಮಹೇಶಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಉಮೇಶ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಫೈರೋಜ್ ಅಹಮದ್ ವಂದಿಸಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳ 1500 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.