ಚಿಕ್ಕಮಗಳೂರು : ಶಿಸ್ತನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಭಾರತ ಸೇವಾದಳವನ್ನು ಸೇರಬೇಕು : ಹಂಪಯ್ಯ.

243
Firstsuddi

ಚಿಕ್ಕಮಗಳೂರು : ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಮತ್ತು ಶಿಸ್ತನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲೂ ಭಾರತ ಸೇವಾದಳದ ಶಾಖೆಗಳನ್ನು ತೆರೆಯಬೇಕು ಎಂದು ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಜೆಸಿಂತಾ ಅನಿಲ್‍ಕುಮಾರ್ ಸಲಹೆ ಮಾಡಿದರು.

ನಗರದ ಆಜಾóದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನಿನ್ನೆ ನಡೆದ ಭಾರತ ಸೇವಾದಳ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಮಕ್ಕಳು ಶೈಕ್ಷಣಿಕವಾಗಿ ಬಹಳಷ್ಟು ಮುಂದುವರೆಯುತ್ತಿದ್ದಾರೆ. ಆದರೆ ಅವರಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು ಕಾಣೆಯಾಗುತ್ತಿದೆ ಎಂದು ವಿಷಾದಿಸಿದ ಅವರು ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮವನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಮಾತನಾಡಿ ಶಿಸ್ತನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಭಾರತ ಸೇವಾದಳವನ್ನು ಸೇರಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಮಾತನಾಡಿ ದೇಶದ ಹಿತದೃಷ್ಠಿಯಿಂದ ಮಕ್ಕಳು ಶಿಕ್ಷಣವಂತರಾಗುವ ಜೊತೆಗೆ ರಾಷ್ಟ್ರಭಕ್ತರು, ದೇಶಪ್ರೇಮಿಗಳು ಮತ್ತು ಶಿಸ್ತಿನ ಸಿಪಾಯಿಗಳೂ ಆಗಬೇಕು ಎಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಮತ್ತು ಶಿಸ್ತನ್ನು ಬೆಳೆಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಪ್ರತಿವರ್ಷ ಸೇವಾದಳದ ದಿನಾಚರಣೆ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಸೇವಾದಳ ದಿನಾಚರಣೆ ಸಪ್ತಾಹದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು, ಚೌಳಹಿರಿಯೂರು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಲತಾಮಣಿ ಮತ್ತು ನಂದಿಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಮೈಲಾರಪ್ಪ ಅವರಿಗೆ ರಾಷ್ಟ್ರೀಯ ಭಾವೈಕ್ಯತಾ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕಿ ಬಿ.ಆರ್.ಗೀತಾ ಅಧ್ಯಕ್ಷತೆ ವಹಿಸಿದ್ದರು, ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ಶಿಕ್ಷಕರಾದ ಸಾವಿತ್ರಿ, ಜಯಂತಿ, ನಾಗವೇಣಿ ಉಪಸ್ಥಿತರಿದ್ದರು.