ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್ ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟರ್ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ, ಒಬ್ಬ ಶಕ್ತಿವಂತ ನಾಯಕ. ರಾಜ್ಯದ ಸಿಎಂ, ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದು, ಪಕ್ಷದ ತತ್ವ, ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಶೆಟ್ಟರ್ ಪಕ್ಷ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದರು.










