ಚಿಕ್ಕಮಗಳೂರು: ಜಾನಪದ ಕಲೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಿ. ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಮಹತ್ತರವಾದ ಹೊಣೆಗಾರಿಕೆ ಇಂದಿನ ಪೀಳಿಗೆಯ ಮೇಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು. ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಘಟಕ ಕೊಪ್ಪದ ಪುರಭವನದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಪ್ರಥಮ ಜಾನಪದ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಆಶಯ ನುಡಿಗಳನ್ನಾಡಿದರು. ಭಾರತೀಯ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಗಳ ಮೂಲಬೇರಾದ ಜಾನಪದವಿಂದು ಆಧುನಿಕತೆಯ ಅಬ್ಬರದಲ್ಲಿ. ನಮ್ಮ ಯುವ ಜನತೆಯ ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಲ್ಲಿ ಕಣ್ಮರೆಯಾಗುತ್ತಿದೆ ಎಂದು ವಿಷಾದಿಸಿದರು. ಜಾನಪದ ನಮ್ಮ ಅಂತಸತ್ವ. ಅದು ಉಳಿದರೆ ಮಾತ್ರ ಜಗತ್ತಿನೆದುರು ನಮ್ಮತನ ಉಳಿಯುತ್ತದೆ. ಜಾನಪದವನ್ನು ಕಳೆದುಕೊಂಡರೆ ನಾವು ಅನಾಥರಾಗಿ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಈ ಹಿನ್ನೆಲೆಯಲ್ಲಿ ಇಂದಿನ ಪೀಳಿಗೆ ಜಾನಪದವನ್ನು ಜತನದಿಂದ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.
ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಜೆ.ಎಂ.ಶ್ರೀಹರ್ಷ ಜಾನಪದ ಮತ್ತು ಜನರ ನಡುವೆ ಅವಿನಾಭಾವ ಸಂಬಂಧವಿದೆ. ಜಾನಪದಕ್ಕೆ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಇದೆ. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಜಾನಪದ ಅತ್ಯಂತ ಅಗತ್ಯವಾಗಿದೆ ಎಂದರು. ಸಮ್ಮೇಳನಾಧ್ಯಕ್ಷ ಹೆಚ್.ಎಂ.ರವಿಕಾಂತ್ ಮಾತನಾಡಿ ಜಾನಪದದಲ್ಲಿ ಎಲ್ಲವೂ ಅಡಕವಾಗಿವೆ. ಜಾನಪದವನ್ನು ಮೈಗೂಡಿಸಿಕೊಂಡರೆ ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು. ಸಮ್ಮೇಳನಕ್ಕೆ ಮುನ್ನ ವಿವಿಧ ಕಲಾತಂಡಗಳ ನಡುವೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ಮೆರವಣಿಗೆಯಲ್ಲಿದ್ದ ಬಾಲಕಿಯರ ಯಕ್ಷ ವೇಷ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಜಾನಪದ ನೃತ್ಯ ಸ್ಪರ್ಧೆ ನಡೆಯಿತು. ಈ ವೇಳೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ದಿವಾಕರ ಭಟ್. ಗೌರವಾಧ್ಯಕ್ಷ ಎಸ್.ಎನ್. ರಾಮಸ್ವಾಮಿ. ಹೆಚ್.ಎಸ್.ಕಳಸಪ್ಪ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ಭಟ್. ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ. ನಾಗೇಶ್ ಉಪಸ್ಥಿತರಿದ್ದರು.
Home ಸ್ಥಳಿಯ ಸುದ್ದಿ ಜಾನಪದ ಸಂಸ್ಕೃತಿಯನ್ನು ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಹೊಣೆ ಇಂದಿನ ಪೀಳಿಗೆ ಮೇಲಿದೆ: ಜಿ.ಬಿ.ಸುರೇಶ್.










