ಜೈಪುರ : ಉದಯಪುರದಲ್ಲಿ ಟೈಲರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಇಡೀ ರಾಜ್ಯದಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಅನ್ನು ಬಂದ್ ಮಾಡಲಾಗಿದೆ. ಅಲ್ಲದೆ, ಮುಂದಿನ 30 ದಿನಗಳ ಕಾಲ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಇದರೊಂದಿಗೆ ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ. ಯಾವುದೇ ರೀತಿಯ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರಕರಣ ಬೆಳಕಿಗೆ ಬಂದ ನಂತರ ಮಂಗಳವಾರ ಇಡೀ ರಾಜ್ಯದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಯಿತು. ಜನರು ಶಾಂತಿ ಕಾಪಾಡುವಂತೆ ಉದಯಪುರ ವಿಭಾಗೀಯ ಆಯುಕ್ತ ರಾಜೇಂದ್ರ ಭಟ್ ಮನವಿ ಮಾಡಿದ್ದಾರೆ.

ಏನಿದು ಘಟನೆ?
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ನಿನ್ನೆ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಆರೋಪಿ ರಿಯಾಜ್, ಕನ್ನಯ್ಯಲಾಲ್ ಅವರ ಕತ್ತನ್ನು ಕತ್ತರಿಸಿದ್ದು, ಮತ್ತೊಬ್ಬ ಆರೋಪಿ ಈ ದೃಶ್ಯವನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಕೊಲೆಯನ್ನು ತಾವೇ ಮಾಡಿದ್ದಾಗಿ ಹೇಳಿರುವ ವಿಡಿಯೊಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಇಬ್ಬರನ್ನೂ ಬಂಧಿಸಲಾಗಿದೆ. ಈ ಭೀಕರ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಪುರದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.










