ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಸೆ.19(ಸೋಮವಾರ)ರಂದು ದೆಹಲಿಯ ಇಡಿ ಕಚೇರಿಗೆ ಖುದ್ದು ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಭಾರತ್ ಜೋಡೋ ಯಾತ್ರೆ ಮತ್ತು ಅಧಿವೇಶನ ನಡೆಯುತ್ತಿರುವಾಗಲೇ ಸಮನ್ಸ್ ಜಾರಿ ಮಾಡಿದ್ದಕ್ಕೆ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತ್ ಜೋಡೋ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.










