ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ನಡೆಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಚೇರ್ ಮನ್ ಆಗಿದ್ದರೆ, ಪುತ್ರಿ ಐಶ್ವರ್ಯ ಕಾರ್ಯದರ್ಶಿಯಾಗಿದ್ದಾರೆ.
ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಂದು ನಮ್ಮ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ಮಾಡಿದ್ದು, ನಮ್ಮ ಜಮೀನು, ವ್ಯವಹಾರದ ಸಂಬಂಧ ತನಿಖೆ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಗಳು ನಿರಂತರ ಕಿರುಕುಳ ನೀಡುತ್ತಿದೆ. ಎಲ್ಲಾ ತನಿಖಾ ಸಂಸ್ಥೆಗಳು ದೂರು ದಾಖಲಿಸಿ ತನಿಖೆ ನಡೆಸುತ್ತಿವೆ. ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಭಯಪಡುವುದಿಲ್ಲ. ಸಿಬಿಐ ಅಧಿಕಾರಿಗಳು ನನ್ನ ಸಂಬಂಧಿಕರು, ವ್ಯವಹಾರಿಕ ಪಾಲುದಾರರಿಗೂ ನೋಟಿಸ್ ನೀಡಿ ಮಾಹಿತಿ ಪಡೆದಿದ್ದಾರೆ ಎಂದರು.
ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ನಮ್ಮ ಮೇಲೆ ಉದ್ದೇಶಪೂರ್ವಕವಾಗಿ ತನಿಖಾ ಸಂಸ್ಥೆಗಳನ್ನು ಬಿಟ್ಟು ಕಿರುಕುಳ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ನ್ಯಾಯಾಲಯ, ದೇವರ ಮೇಲೆ ಭಾರ ಹಾಕಿ ಮುನ್ನಡೆಯುತ್ತೇವೆ. ನಾನು ಯಾವುದೇ ತಪ್ಪು ಮಾಡದಿರುವುದರಿಂದ ಧೈರ್ಯವಾಗಿದ್ದೇನೆ ಎಂದು ಹೇಳಿದರು.










