ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂ ಮೊರೆ ಹೋದ ವಿಪಕ್ಷಗಳು.

46
firstsuddi

ನವದೆಹಲಿ : ಇಡಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ದಂತಹ ತನಿಖಾ ಸಂಸ್ಥೆಗಳು ಬಿಜೆಪಿ ವಿರೋಧಿಗಳನ್ನು ಮಾತ್ರ ಗುರಿಯಾಗಿಸುತ್ತಿವೆ ಎಂದು ಅರ್ಜಿಯಲ್ಲಿ ಪ್ರತಿಪಕ್ಷಗಳು ಆರೋಪಿಸಿವೆ. ಸಿಬಿಐ, ಇಡಿ ಪ್ರಕರಣಗಳನ್ನು ಎದುರಿಸುತ್ತಿರುವ ನಾಯಕರು ಬಿಜೆಪಿ ಸೇರಿದರೆ ಅವರ ಮೇಲಿನ ಪ್ರಕರಣ ಕೊನೆಗೊಳ್ಳುತ್ತವೆ ಎಂದು ಉಲ್ಲೇಖಿಸಿದ್ದಾರೆ.

ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ 14 ಕಕ್ಷಿದಾರರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು. ಸಿಜೆಐ ಡಿ.ವೈ ಚಂದ್ರಚೂಡ್, ತುರ್ತು ವಿಚಾರಣೆ ಸಾಧ್ಯವಿಲ್ಲ. ಏಪ್ರಿಲ್ 5 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.