ನವದೆಹಲಿ: ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ವಿ ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಾಲ್ ಅವರಿದ್ದ ಪೀಠ ವಜಾಗೊಳಿಸಿದೆ. ಈ ಮೂಲಕ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರಕ್ಕೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆಯಾಗಿದೆ.
ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಗಾಂಧಿ ಜಯಂತಿಯಂದು ಮೆರವಣಿಗೆ ನಡೆಸಲು ಅಕ್ಟೋಬರ್‌ನಲ್ಲಿ ಆರ್‌ಎಸ್‌ಎಸ್ ತಮಿಳುನಾಡು ಸರ್ಕಾರದ ಅನುಮತಿ ಕೋರಿತ್ತು. ಆದರೆ ರಾಜ್ಯ ಸರ್ಕಾರ ನಿರಾಕರಿಸಿದ ಹಿನ್ನೆಲೆ ಆರ್‌ಎಸ್‌ಎಸ್ ಹೈಕೋರ್ಟ್ ಮೆಟ್ಟಿಲೇರಿತ್ತು.










