ನವದೆಹಲಿ : ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಗಲಭೆ ಸೃಷ್ಟಿಸಿದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಗಳಿಂದ ಕೆಡವುತ್ತಿರುವ ನಡೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ತೆರವು ಕಾರ್ಯವು ಕಾನೂನಿಗೆ ಅನುಗುಣವಾಗಿ ಇರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಯೋಗಿ ಆದಿತ್ಯನಾಥ್ ಸರ್ಕಾರದ ಬುಲ್ಡೋಜರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣೆ ಬಳಿಕ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದ್ದು, 3 ದಿನದಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಆದರೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ನಿರಾಕರಿಸಿದೆ.
ಎಲ್ಲ ಕ್ರಮಗಳನ್ನು ನಿಲ್ಲಿಸುವಂತೆ ಹೇಳುತ್ತಿಲ್ಲ ಎಂದ ಕೋರ್ಟ್, ಆದರೆ ಎಲ್ಲ ಕ್ರಮಗಳೂ ಕಾನೂನಿನ ಪರಿಮಿತಿಯಲ್ಲಿ ನಡೆಯಬೇಕು. ಎಲ್ಲವೂ ನ್ಯಾಯಸಮ್ಮತವಾಗಿ ಕಾಣಬೇಕು. ಕಾನೂನಿಗೆ ಅನುಗುಣವಾಗಿ ಅಧಿಕಾರಿಗಳು ವರ್ತಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆ ಕಾಪಾಡಬೇಕು ಎಂದು ಹೇಳಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.










