ದರ್ಶನ್ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದಿಂದ ಅನುಮತಿ: ಪೊಲೀಸ್ ಆಯುಕ್ತ ಬಿ.ದಯಾನಂದ್.

33

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ 4 ತಿಂಗಳು ಸೆರೆವಾಸ ಅನುಭವಿಸಿದ್ದ ನಟ ದರ್ಶನ್ ಅವರಿಗೆ ಅವರ ಆರೋಗ್ಯ ಸಮಸ್ಯೆ ಇರುವ ಕಾರಣಗಳಿಂದ 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅಕ್ಟೋಬರ್ 30ರಂದು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು. ನಟ ದರ್ಶನ್ ತೂಗುದೀಪ ಅವರಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರದಿಂದ ಅನುಮತಿ ದೊರೆತಿದ್ದು, ಸದ್ಯದಲ್ಲೇ ಕೋರ್ಟ್‍ಗೆ ಮನವಿ ಸಲ್ಲಿಸಲಾಗುವುದು ಎಂದರು.