ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ ವಿವಾದದ ಬೆನ್ನಲ್ಲೇ ದೆಹಲಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ದೆಹಲಿಯ ಕಸ್ತೂರ್ ಬಾ ಗಾಂಧಿ ಮಾರ್ಗ್ ನಲ್ಲಿರುವ ಬಿಬಿಸಿ ಕಚೇರಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿಯಲ್ಲಿ ತೆರಿಗೆ ಸಮೀಕ್ಷೆ ನಡೆಸುತ್ತಿದ್ದಾರೆಂದು ಎಂದು ವರದಿಗಳು ತಿಳಿಸಿವೆ. ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಿಬಿಸಿ ಇತ್ತೀಚೆಗೆ 2022 ರ ಗುಜರಾತ್ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆಪಾದನೆ ಮಾಡಲಾಗಿತ್ತು. ಕೇಂದ್ರವು ಸಾಮಾಜಿಕ ಮಾಧ್ಯಮ ಮತ್ತು ಆನ್ ಲೈನ್ ಚಾನೆಲ್ ಗಳಲ್ಲಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದರೂ, ದೇಶದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಇದನ್ನು ಪ್ರದರ್ಶಿಸಲಾಗಿದೆ.
ಭಾರತದಲ್ಲಿ ಬಿಬಿಸಿಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ತಿರಸ್ಕರಿಸಿದ ಸುಪ್ರೀ ಕೋರ್ಟ್, ಸಾಕ್ಷ್ಯಚಿತ್ರ ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಮೌಖಿಕವಾಗಿ ಪ್ರಶ್ನಿಸಿದೆ.










