ದೇವೇಗೌಡರನ್ನ ಆಹ್ವಾನಿಸಿದ್ದೇವೆಂದು ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ : ಜೆಡಿಎಸ್ ವಾಗ್ದಾಳಿ

84
firstsuddi

ಬೆಂಗಳೂರು : ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ನೀಡದೇ ಇರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ನಿನ್ನೆ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು.

ಇದಕ್ಕೆ ತಿರುಗೇಟು ನೀಡಿದ್ದ ಬಿಜೆಪಿ, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಟ್ವೀಟ್ ಮಾಡಿತ್ತು.

ಇದೀಗ ಮತ್ತೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ, ಸರಿ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಸಿಎಂ ಪತ್ರವನ್ನು ‘ಸಂಘ ಸಂಸ್ಕಾರ’ದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಕಿಡಿಕಾರಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ದೇವೇಗೌಡರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ?.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?. ಎಂದು ಜೆಡಿಎಸ್ ಪ್ರಶ್ನಿಸಿದೆ.