ಬೆಳಗಾವಿ : ನಂದಿನಿ ಹಾಲಿನ ದರ 3 ರೂ. ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿ, ವಿದ್ಯುತ್, ಸಾಗಣೆ ವೆಚ್ಚ ಶೇ.30ರಷ್ಟು ಹೆಚ್ಚಳವಾಗಿದೆ. ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗಿಸಲು ಹಾಲಿನ ದರ ಹೆಚ್ಚಿಸುವಂತೆ ಸಿಎಂಗೆ ಬಾಲಚಂದ್ರ ಜಾರಕಿಹೊಳಿ ಕೋರಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಅಮೂಲ್ ಸೇರಿ ದೇಶದ ವಿವಿಧ ಸಹಕಾರ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ದರ ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಸಿದರೆ ಲೀಟರ್ ಗೆ 8 ರಿಂದ 10 ರೂ. ಹೆಚ್ಚಳವಾಗಿದೆ. ಹೀಗಾಗಿ ನಂದಿನಿ ಹಾಲಿನ ಮಾರಾಟ ದರ ಕನಿಷ್ಠ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳಕ್ಕೆ ಸಿಎಂ ಕ್ರಮ ಕೈಗೊಳ್ಳಬೇಕು. ಇದರಿಂದ ಹಾಲು ಉತ್ಪಾದಕರಿಗೆ ಕನಿಷ್ಠ 2 ರೂ. ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ 1 ರೂ. ನೀಡಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.










