ಬೆಂಗಳೂರು : ನಾಡಗೀತೆ ಕುರಿತು ಭುಗಿಲೆದ್ದಿದ್ದ ವಿವಾದಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ನಾಡಗೀತೆಗೆ ಕಾಲಮಿತಿಯನ್ನು ನಿಗದಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಏನಿದು ವಿವಾದ? ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವೊಂದು ಕಾರ್ಯಕ್ರಮಗಳಲ್ಲಿ 7-8 ನಿಮಿಷಗಳ ಕಾಲ ಹಾಡಲಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂದು ಒತ್ತಾಯ ಸರ್ಕಾರದ ಮುಂದಿತ್ತು. ಇದೀಗ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಚಿವ ವಿ ಸುನಿಲ್ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.










