ರಾಮನಗರ: ನೀರಿನ ಟ್ಯಾಂಕ್ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸೂರು ಗೊಲ್ಲಹಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿ ಕೌಶಿಕ್(12) ಮೃತ ರ್ದುದೈವಿ. ಗೊಲ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವಿದ್ಯಾರ್ಥಿಯ ಶವವನ್ನು ದಯಾನಂದ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










