ನವದೆಹಲಿ: ಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಇಂದು ಚಾರ್ಜ್ಶೀಟ್ ಸಲ್ಲಿಸಿದೆ.
ಚಾರ್ಜ್ಶೀಟ್ ಸಲ್ಲಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅಬ್ದುಲ್ಲಾ ಅವರನ್ನು ಹಲವು ಬಾರಿ ಪ್ರಶ್ನಿಸಿದೆ. ಕೊನೆಯ ಬಾರಿಗೆ ಮೇ 31 ರಂದು ಶ್ರೀನಗರದಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿತ್ತು. 2020ರ ಡಿಸೆಂಬರ್ ತಿಂಗಳಲ್ಲಿ ಅಬ್ದುಲ್ಲಾ ಅವರಿಗೆ ಸೇರಿದ್ದ 11.86 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಕಾಶ್ಮೀರ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ವೇಳೆ ಫಾರೂಕ್ ಅಬ್ದುಲ್ಲಾ ತಮ್ಮ ಸ್ಥಾನ ದುರುಪಯೋಗ ಪಡಿಸಿಕೊಂಡಿದ್ದರು. ಜೊತೆಗೆ ಕ್ರೀಡಾ ಸಂಸ್ಥೆಯಲ್ಲಿ ಅಕ್ರಮವಾಗಿ ನೇಮಕಾತಿ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಸಂಘದ ಪದಾಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಆರೋಪಪಟ್ಟಿಯ ಆಧಾರದ ಮೇಲೆ ಇಡಿ ಹಣ ವರ್ಗಾವಣೆ ತನಿಖೆ ಆರಂಭಿಸಿದೆ. ಫಾರೂಕ್ ಅಬ್ದುಲ್ಲಾ ಅವರು ಸಂಘದ ಅಧ್ಯಕ್ಷರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಕ್ರೀಡಾ ಸಂಸ್ಥೆಯಲ್ಲಿ ನೇಮಕಾತಿಗಳನ್ನು ಮಾಡಿದ್ದಾರೆ. ಇದರಿಂದಾಗಿ ಬಿಸಿಸಿಐ ಪ್ರಾಯೋಜಿತ ಹಣವನ್ನು ಲಾಂಡರಿಂಗ್ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.










