ನ.11ರಂದು ಬೆಂಗಳೂರಿಗೆ ಮೋದಿ ಆಗಮನ…

64
firstsuddi

ಬೆಂಗಳೂರು : ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

ಗಾಂಧಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ 2ನೇ ಟರ್ಮಿನಲ್ ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ. ನಟ ರಜನಿಕಾಂತ್ ಅವರನ್ನು ಸಂಪರ್ಕಿಸುವ ಪ್ರಯತ್ನವೂ ನಡೆದಿದೆ ಎಂದು ತಿಳಿಸಿದರು.