ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಸಂಗ್ರಹಿಸಿಡುವ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಪಟಾಕಿ ಗೋದಾಮಿನ ಮಾಲೀಕ ರವಿ(45), ಅವರ ಪತ್ನಿ ಜಯಶ್ರೀ(40), ರಿತಿಕಾ(17), ರಿತೀಶ್(15), ಇಬ್ರಾ(22) ಸಿಮ್ರಾನ್(20) ಸರಸು(50), ಹಾಗೂ ರಾಜೇಶ್ವರಿ(50) ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಕೃಷ್ಣಗಿರಿ ಸರ್ಕಾರಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣಗಿರಿ ಜಿಲ್ಲಾಧಿಕಾರಿ ಸರಯು, ಎಸ್ಪಿ ಸರೋಜ್ಕುಮಾರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಾಥಮಿಕ ತನಿಖೆಯ ಪ್ರಕಾರ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಪಾರುಗಾಣಿಕಾ ಮತ್ತು ಅಗ್ನಿಶಾಮಕ ತಂಡಗಳು ಅಪಘಾತದ ಸ್ಥಳದಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡುತ್ತಿವೆ. ಅವಘಡದಲ್ಲಿ ಸಿಲುಕಿರುವ ಕೆಲವರನ್ನು ರಕ್ಷಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. 20 ಜನರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.










