ಬಸ್, ಕಾರು ನಡುವೆ ಡಿಕ್ಕಿ – 6 ಮಂದಿ ದುರ್ಮರಣ…

63
firstsuddi

ಮಡಿಕೇರಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸುಳ್ಯದಲ್ಲಿರುವ ಕೆವಿಜಿ ಆಸ್ಪತ್ರೆಗೆ ದಾಖಲಿಸಲು ವಾಹನದಲ್ಲಿ ತೆರಳುತ್ತಿದ್ದಾಗ ಮೂವರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದವರು ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾಗಿದ್ದು, ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ. ಓರ್ವ ವ್ಯಕ್ತಿ ಮತ್ತು ಮಗು ಗಂಭೀರ ಸ್ಥಿತಿಯಲ್ಲಿದ್ದು, ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹವನ್ನು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.